ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಜಾಸ್ತಿಯಾಗುತ್ತಿದ್ದ ಹಾಗೇ ಕಂಪನಿಗಳ ಪ್ರತಿನಿಧಿಗಳ ಜತೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದರು.
ಗೃಹ ಕಚೇರಿ ಕೃಷ್ಣದಲ್ಲಿ ಸಭೆಯಲ್ಲಿ ಎಚ್ಚರಿಕೆ ನೀಡಿದ ಸಿಎಂ ಅವರು, ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ಸಹಿಸುವುದಿಲ್ಲ ಎಂದರು.
ಮಾಧ್ಯಮಗಳಲ್ಲಿ ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ತಾಕೀತು ಮಾಡಿದರು.
ಸಾಲ ವಸೂಲಿಗೆ ಇಳಿದಿರುವ ನಿಮ್ಮ ಸಿಬ್ಬಂದಿ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಮುಖ್ಯಮಂತ್ರಿ ಖಾರವಾಗಿ ಪ್ರಶ್ನಿಸಿದರು.