ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಪಕ್ಷದೊಳಗೆ ಅಂತಹ ಒಪ್ಪಂದವಾಗಲೀ, ಚರ್ಚೆಗಳಾಗಲೀ ಯಾವುದೂ ನಡೆಯುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಮತ್ತೇ ಸ್ಪಷ್ಟನೆಯನ್ನು ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.
ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಈ ಬಗ್ಗೆ ಈಗಾಗಲೇ ನಮ್ಮ ಹೈಕಮಾಂಡ್, ರಣದೀಪ್ ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲರೂ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ, ಐದು ವರ್ಷ ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯಲಿದ್ದೇನೆ. ಅಧಿಕಾರ ಹಸ್ತಾಂತರದ ಬಗ್ಗೆ ಯಾವುದೇ ಒಪ್ಪಂದವಾಗಿಲ್ಲ ಎಂದು ಸಿದ್ದರಾಮಯ್ಯ ಅವರು ಈ ಹಿಂದೆಯೂ ಸ್ಪಷ್ಟನೆಯನ್ನು ನೀಡಿದ್ದರು.
ಆದರೆ ರಾಜ್ಯ ರಾಜಕಾರಣದಲ್ಲಿ ಸಿಎಂ ಸ್ಥಾನ ಬದಲಾವಣೆ ಜೋರಾಗಿ ಚರ್ಚೆ ನಡೆಯುತ್ತಿದೆ. ಈ ನಡುವೆ ಸಿದ್ದರಾಮಯ್ಯ ಮಾತ್ರ ನಾನೇ 5 ವರ್ಷ ಸಿಎಂ ಎಂದು ಪುನರುಚ್ಚರಿಸಿದ್ದಾರೆ.