ಮೈಸೂರು: ಬಿಜೆಪಿಯಲ್ಲಿ ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡುತ್ತೇನೆಂದು ಹೇಳಿದರೂ ನಾನು ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ, ಪಂಗಡಗಳ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಮತಯಾಚಿಸಿ ಅವರು ಮಾತನಾಡಿದರು.
ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿಯಾಗಿವೆ. ಹೀಗಾಗಿ ಮೀಸಲಾತಿಯನ್ನು ಅವು ಇಷ್ಟಪಡುವುದಿಲ್ಲ. ಮೀಸಲಾತಿ ಎನ್ನುವುದು ಭಿಕ್ಷೆಯಲ್ಲ. ಅದು ಶೋಷಿತ ಜನ ಸಮುದಾಯಗಳ ಹಕ್ಕು. ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇದ್ದೇ ಇರಬೇಕು ಎಂದು ಹೇಳಿದರು.
ಬಿಜೆಪಿ, ಆರ್‌ಎಸ್‌ಎಸ್ ಕಡೆ ಯಾರೂ ತಲೆ ಹಾಕಬಾರದು. ಶೂದ್ರರು, ದಲಿತರು ಹಾಗೂ ಮಹಿಳೆಯರಿಗೆ ಆರ್‌ಎಸ್‌ಎಸ್ ಗರ್ಭಗುಡಿಯೊಳಗೆ ಪ್ರವೇಶವನ್ನೇ ಕೊಡುವುದಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.