ಗಣಪತಿ ಪ್ರಕರಣ; ಕೋರ್ಟ್ ಆದೇಶಕ್ಕೆ ತಲೆಬಾಗುತ್ತೇನೆ ಎಂದ ಸಚಿವ ಜಾರ್ಜ್

ಸೋಮವಾರ, 18 ಜುಲೈ 2016 (17:11 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್‌ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಕೋರ್ಟ್‌ ಆದೇಶಕ್ಕೆ ತಲೆಬಾಗುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್, ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ರಾಜೀನಾಮೆ ಪಡೆಯುವುದು ಬಿಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಟ್ಟ ವಿಚಾರ ಎಂದು ಹೇಳಿದರು.
 
ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ಎಫ್‌ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸಿ ಎಂದು ತಿಳಿಸಿದೆ. ಈ ಕುರಿತು ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸುತ್ತೇನೆ ಎಂದು ತಿಳಿಸಿದರು. 
 
ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿರುವ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಿಸಿ ಎಂದು ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅನ್ನಪೂರ್ಣೆಶ್ವರಿಯವರು ಮಡಿಕೇರಿ ಟೌನ್ ಪೊಲೀಸರಿಗೆ ಸೂಚನೆ ನೀಡಿದೆ.
 
ಎಂ.ಕೆ.ಗಣಪತಿ ಅವರ ಪುತ್ರ ನೇಹಾಲ್ ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಶರಣಾಗುವ ಮುನ್ನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ಅವರು ತನಗೆ ಕಿರುಕುಳ ನೀಡತ್ತಿದ್ದಾರೆ. ನನಗೆನಾದ್ರೂ ಆದ್ರೆ ಈ ಮೂವರೇ ಕಾರಣ ಎಂದು ಆರೋಪಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ