ಅಮಿತ್ ಶಾ , ರಾಹುಲ್‌ಗೆ ಹೆದರೋಲ್ಲ, ಏಕಾಂಗಿ ಹೋರಾಟ: ದೇವೇಗೌಡ

ಶನಿವಾರ, 12 ಆಗಸ್ಟ್ 2017 (16:13 IST)
ರಾಷ್ಟ್ರೀಯ ಪಕ್ಷಗಳ ಮುಖಂಡರಾದ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದರೂ ಹೆದರೋಲ್ಲ, ಏಕಾಂಗಿಯಾಗಿ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯದ ಜನತೆಗೆಗಾಗಿ ಯಾವುದೇ ಒಳ್ಳೆಯ ಕೆಲಸ ಮಾಡಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳು ಜನತೆಯ ಹಿತ ಕಾಪಾಡುವಲ್ಲಿ ವಿಫಲವಾಗಿವೆ ಎಂದು ಗುಡುಗಿದರು.
 
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದರೂ ರಾಜ್ಯ ಸರಕಾರವಾಗಲಿ, ಕೇಂದ್ರ ಸರಕಾರವಾಗಲಿ ರೈತರಿಗಾಗಿ ಬರಪರಿಹಾರ ಕಾಮಗಾರಿಗಳನ್ನು ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಮಹಾದಾಯಿ, ಕಾವೇರಿ ವಿವಾದ, ಎತ್ತಿನಹೊಳೆ ಯೋಜನೆ ಸೇರಿದಂತೆ ಹಲವಾರು ನೀರಾವರಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಲು ಸಿದ್ದರಾಗಿಲ್ಲ. ಸಿಎಂ ಸಿದ್ದರಾಮಯ್ಯ ಸರಕಾರ ಕೂಡಾ ನೀರಾವರಿ ಯೋಜನೆಗಳ ಜಾರಿಗೆ ಆಸಕ್ತಿ ತೋರಿಲ್ಲ ಎಂದು ಆರೋಪಿಸಿದರು.
 
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಏನು ಎನ್ನುವುದನ್ನು ತೋರಿಸುತ್ತೇವೆ. ರಾಜ್ಯದ ಜನತೆ ರಾಷ್ಟ್ರೀಯ ಪಕ್ಷಗಳ ಕಾರ್ಯವೈಖರಿಯಿಂದ ಬೇಸತ್ತಿದ್ದು ಪ್ರಾದೇಶಿಕ ಪಕ್ಷಕ್ಕೆ ಮನ್ನಣೆ ಹಾಕುವ ವಿಶ್ವಾಸವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ