ಸಿಎಂ ರಾಜೀನಾಮೆ ನೀಡಿದ್ರೆ ರಾಜ್ಯದಲ್ಲಿ ಶಾಂತಿ ನೆಲೆಸುತ್ತೆ: ಈಶ್ವರಪ್ಪ

ಸೋಮವಾರ, 10 ಜುಲೈ 2017 (13:56 IST)
ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ರೆ ರಾಜ್ಯದಲ್ಲಿ ಶಾಂತಿ ನೆಲೆಸುತ್ತದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಾಂತಿ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಗೃಹ ಇಲಾಖೆ ಸಿಎಂ ಸಿದ್ದರಾಮಯ್ಯ ಅವರ ಕೈಯಲ್ಲಿದೆ. ಆದರೆ, ಬಿಜೆಪಿ ಮತ್ತು ಆರೆಸ್ಸೆಸ್ ದೂಷಿಸುತ್ತಾ ಕಾಲ ಕಳೆಯುತ್ತಿದ್ದಾರೆ. ಇನ್ನೆಷ್ಟು ಹೆಣಗಳು ಬೀಳಬೇಕು. ಸಿಎಂ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು. 
 
ಗಲಭೆಯಾದ್ರೆ ಮತ್ತೆ ನಾವೇ ಅಧಿಕಾರಕ್ಕೆ ಬರಬಹುದು ಎಂದು ಸಿಎಂ ಮತ್ತು ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿದ್ದಾರೆ. ಆದರೆ, ಅವರ ಭ್ರಮೆ ಭ್ರಮೆಯಾಗಿಯೇ ಉಳಿಯಲಿದೆ ಎಂದು ಲೇವಡಿ ಮಾಡಿದ್ದಾರೆ.
 
ಬೆಂಗಳೂರಿನ ಬಿಡಿಎ ವ್ಯಾಪ್ತಿಯಲ್ಲಿ ನಾಲ್ಕು ನಿವೇಶನಗಳಿವೆ. ವಿದೇಶದಲ್ಲಿ ಆಸ್ತಿ ಮಾಡಿದ್ದಾರೆ ಎಂದು ವಕೀಲ ವಿನೋದ್ ಎನ್ನುವವರು ನನ್ನ ವಿರುದ್ಧ  ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ಆದ್ದರಿಂದ ಸುಳ್ಳು ಆರೋಪ ಮಾಡುತ್ತಿರುವ ವಿನೋದ್ ವಿರುದ್ಧ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ 5 ಕೋಟಿ ರೂಪಾಯಿ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ಇದಕ್ಕಾಗಿ ನ್ಯಾಯಾಲಯದಲ್ಲಿ 4 ಲಕ್ಷ ಶುಲ್ಕ ಕಟ್ಟಿದ್ದೇನೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ