Suhas Shetty, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ: ಸಿದ್ದರಾಮಯ್ಯ

Sampriya

ಶುಕ್ರವಾರ, 2 ಮೇ 2025 (18:20 IST)
ಬೆಂಗಳೂರು: ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಹಲ್ಲೆಕೋರರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಭರವಸೆ ನೀಡಿದರು.

ಗುರುವಾರ ಮಂಗಳೂರಿನ ಬಜ್ಪೆಯಲ್ಲಿ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಎಂಬ ರೌಡಿ ಶೀಟರ್ ನನ್ನು ಅಪರಿಚಿತರ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿದೆ. ಈ ಪ್ರಕರಣ ಸಂಬಂಧ ಕರಾವಳಿಯೇ ಬೆಚ್ಚಿಬಿದ್ದಿದ್ದು, ಪೊಲೀಸರು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಮತ್ತು ಶಶಾಂಕ್ ಅವರೊಂದಿಗೆ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸುಹಾಶ್ ಶೆಟ್ಟಿ ಅವರನ್ನು ನಾಲ್ಕು ಚಕ್ರದ ವಾಹನ ಮತ್ತು ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದುಷ್ಕರ್ಮಿಗಳ ಗುಂಪು ಅಡ್ಡಗಟ್ಟಿದೆ.

ಐದರಿಂದ ಆರು ಮಂದಿಯಿದ್ದ ದುಷ್ಕರ್ಮಿಗಳು ಸುಹಾಶ್ ಶೆಟ್ಟಿ ಅವರ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ್ದಾರೆ. ತಕ್ಷಣ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಮಂಗಳೂರು ನಗರ ಪೊಲೀಸರು ತಿಳಿಸಿದ್ದಾರೆ.

ಉದ್ವಿಗ್ನತೆಯ ಮಧ್ಯೆ, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ 2023 ರ ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 144 ರ ಅಡಿಯಲ್ಲಿ ತ್ವರಿತವಾಗಿ ನಿಷೇಧಾಜ್ಞೆ ಜಾರಿಗೊಳಿಸಿದೆ.

ಈ ಆದೇಶವು ಶುಕ್ರವಾರ ಬೆಳಿಗ್ಗೆ 6:00 ಗಂಟೆಗೆ ಜಾರಿಗೆ ಬಂದಿದ್ದು, ಮೇ 6, 2025 ರಂದು ಬೆಳಿಗ್ಗೆ 6:00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳ ಪತ್ತೆಗೆ ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಎಂದು ಕರ್ನಾಟಕ ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ