ಪ್ರಧಾನಮಂತ್ರಿಯವರ 15 ಅಂಶಗಳ ಕಾರ್ಯಕ್ರಮ ಪ್ರಗತಿಗೆ ಸೂಚನೆ

ಭಾನುವಾರ, 30 ಜನವರಿ 2022 (21:03 IST)
ಮಡಿಕೇರಿ:-ಕೃಷಿ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತರಿಗೆ ಇರುವ ಕಾರ್ಯಕ್ರಮಗಳನ್ನು ತಲುಪಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಯವರ ಹೊಸ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೃಷಿ ಇಲಾಖೆಯಿಂದ ಟಾರ್ಪಲ್ ವಿತರಣೆ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆ, ಹೀಗೆ ಹಲವು ಸೌಲಭ್ಯಗಳನ್ನು ತಲುಪಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಕಾರ್ಮಿಕ ಇಲಾಖೆ ವತಿಯಿಂದ ಅಲ್ಪಸಂಖ್ಯಾತರಿಗೆ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವುದು. ಹಾಗೆಯೇ ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಹೆಸರನ್ನು ನೋಂದಾಯಿಸಿ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದರು.
ಕೌಶಲ್ಯ ಅಭಿವೃದ್ಧಿ ಇಲಾಖೆಯಿಂದ ಅಲ್ಪಸಂಖ್ಯಾತರಿಗೆ ಸ್ವಉದ್ಯೋಗ ಕಲ್ಪಿಸುವ ಸಂಬಂಧ ಕೌಶಲ್ಯ ತರಬೇತಿ ನೀಡುವುದು ಮತ್ತಿತರ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಸಮಿತಿ ಸದಸ್ಯರಾದ ಕೆ.ಟಿ.ಬೇಬಿ ಮ್ಯಾಥ್ಯು ಅವರು ಮಾತನಾಡಿ, ಉನ್ನತ ಶಿಕ್ಷಣ ಪಡೆಯುವವರಿಗೆ ಶಿಷ್ಯ ವೇತನ ಭರಿಸಬೇಕು. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ಒದಗಿಸಬೇಕು ಎಂದು ಕೋರಿದರು.
ಸದಸ್ಯರಾದ ಲತೀಫ್ ಅವರು ಮಾತನಾಡಿ, ಕೃಷಿ ಟಾರ್ಪಲ್ ವಿತರಿಸುವಂತಾಗಬೇಕು. ಹಾಗೆಯೇ ತೋಟಗಾರಿಕೆ ಇಲಾಖೆಯಿಂದ ಅಗತ್ಯ ಸೌಲಭ್ಯ ಕಲ್ಪಿಸುವಂತಾಗಬೇಕು ಎಂದರು.
ಮತ್ತೊಬ್ಬ ಸದಸ್ಯರಾದ ಚಂದ್ರಪ್ರಸಾದ್ ಅವರು ಮಾತನಾಡಿ ಸಹಾಯಧನದಡಿ ಸಾಲ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮಮತ ಅವರು ಕುಶಾಲನಗರದಲ್ಲಿರುವ ಮೌಲನಾ ಆಜಾದ್ ಮಾದರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ನಿವೇಶನ ಒದಗಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನಾ ಎಂ.ಶೇಖ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೇದಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮುದ್ದಣ್ಣ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಾಲಚಂದ್ರ, ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಸ್ನೇಹಾ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಾಗೇಂದ್ರ, ವಕ್ಫ್ ಬೋರ್ಡ್ ಅಧಿಕಾರಿ ಮಹಮ್ಮದ್ ಇರ್ಫಾನ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯವಸ್ಥಾಪಕಿ ನಂದಿನಿ ಮತ್ತಿತರರು ಇದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ