ಬೆಂಗಳೂರು: ಮಹಿಳೆ ಮೇಲೆ ಅತ್ಯಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಭವಿಷ್ಯ ಇದೇ 30ರಂದು ನಿರ್ಧಾರವಾಗಲಿದೆ.
ಒಂದು ವೇಳೆ ಕೋರ್ಟ್, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಗುರಿಯಾಗಲಿದ್ದಾರೆ.
ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ತನಿಖೆ ನಡೆಸಿದ ವಿಶೇಷ ತನಿಖಾ ತಂಡ(ಎಸ್‌ಐಟಿ) ನಂತರ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಆಗಿತ್ತು.
ಸಿಐಡಿ ಇನ್ಸ್‌ಪೆಕ್ಟರ್ ಶೋಭಾ ಅವರು ತನಿಖೆಯ ನೇತೃತ್ವ ವಹಿಸಿದ್ದರು ಮತ್ತು 26 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡು ಸುಮಾರು 2 ಸಾವಿರ ಪುಟಗಳ ಚಾರ್ಜ್ ಶೀಟನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಸಲ್ಲಿಸಿದ್ದಾರೆ.
ಪ್ರಜ್ವಲ್ ರೇವಣ್ಣ ವಿರುದ್ಧ ಇನ್ನೂ ಮೂರು ಅತ್ಯಾಚಾರ ಪ್ರಕರಣಗಳು ಕೋರ್ಟ್ ನಲ್ಲಿ ವಿಚಾರಣೆಯ ಹಂತದಲ್ಲಿವೆ.
ಹಲವು ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಲೈಂಗಿಕ ಪ್ರಕರಣದ ಆರೋಪದಲ್ಲಿ ಜರ್ಮನಿಯಿಂದ ವಾಪಾಸ್ಸಾಗುತ್ತಿದ್ದ ವೇಳೆ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಬಂಧಿಸಿತ್ತು. ಅಂದಿನಿಂದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದಾರೆ.
ಇದೇ ಪ್ರಕರಣದಲ್ಲಿ ಪ್ರಜ್ವಲ್ ಅವರ ತಂದೆ ಎಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ, ನಂತರ ಅವರಿಗೆ ಜಾಮೀನು ನೀಡಲಾಯಿತು ಮತ್ತು ದೂರಿನಲ್ಲಿ ಆರೋಪಿ ಎಂದು ಹೆಸರಿಸಲಾದ ಅವರ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆದಿದ್ದರು. ಹೀಗಾಗಿ ಬಂಧನದಿಂದ ತಪ್ಪಿಸಿಕೊಂಡರು.