ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶ್ರೀರಾಮುಲು
ಶನಿವಾರ, 22 ಅಕ್ಟೋಬರ್ 2016 (16:11 IST)
ಹಾಡುಹಗಲೇ ಆರ್‌ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ಸಂಸದ ಬಿ.ಶ್ರೀರಾಮುಲು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಆಡಳಿತ ದಿಕ್ಕು ತಪ್ಪಿದೆ ಎಂದು ಹೇಳಿದರು.
ಆರ್‌ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ನಡೆದು ಒಂದು ವಾರ ಕಳೆಯುತ್ತಾ ಬಂದಿದೆ. ಆದರೂ ಆರೋಪಿಗಳ ಬಂಧನವಾಗಿಲ್ಲ. ಈ ಕೂಡಲೇ ಆರೋಪಿಗಳನ್ನು ಬಂಧಿಸಿ ರುದ್ರೇಶ್ ಕುಟುಂಬ ವರ್ಗಕ್ಕೆ ನ್ಯಾಯ ಕೊಡಿಸಬೇಕು. ರುದ್ರೇಶ್ ಕುಟುಂಬಕ್ಕೆ ನ್ಯಾಯ ದೊರೆಯುವವರೆಗೂ ನಾವು ಹೋರಾಟ ನಡೆಸುತ್ತೇವೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಪೊಲೀಸ್ ಅಧಿಕಾರಿ ಹಾಗೂ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವಲ್ಲಿ ಸರಕಾರ ವಿಫಲವಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ