ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರ ಚೆಲ್ಲಾಟ: ಕುಮಾರಸ್ವಾಮಿ ವಾಗ್ದಾಳಿ

ಬುಧವಾರ, 19 ಅಕ್ಟೋಬರ್ 2016 (17:12 IST)
ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರ ಚೆಲ್ಲಾಟವಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
 
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವವಿದೆ ಎಂದು ಕರ್ನಾಟಕ ಪರ ವಕೀಲ ಫಾಲಿ ಎಸ್ ನಾರಿಮನ್ ವಾದ ಮಂಡಿಸುತ್ತಾರೆ. ಆದರೆ, ಸುಪ್ರೀಂ ಆದೇಶದಂತೆ ಕಾವೇರಿಯಿಂದ ತಮಿಳುನಾಡಿಗೆ ನೀರು ಬಿಡಲು ಯಾವುದೇ ತೊಂದರೆ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳುತ್ತಾರೆ. ಸಧ್ಯ ಎಂ.ಬಿ.ಪಾಟೀಲ್‌ರೇ ರಾಜ್ಯದ ಜಲತಜ್ಞರಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಕಾವೇರಿ ವಿಚಾರದಲ್ಲಿ ಪದೇ ಪದೇ ಸರ್ವಪಕ್ಷಸಭೆ ಹಾಗೂ ಅಧಿವೇಶನ ಕರೆಯುವುದನ್ನು ನಿಲ್ಲಿಸಿ. ಯಾವುದೇ ಕಾರಣಕ್ಕೂ ಕಾವೇರಿಯಿಂದ ನೀರು ಬಿಡುವುದಿಲ್ಲ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳುತ್ತೀರಿ. ಆದರೂ, ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿಲ್ಲ. ಸಭೆ ಕರೆದು ಸಮಸ್ಯೆಯನ್ನು ನಮ್ಮ ತಲೆಗೆ ಕಟ್ಟುವ ಪ್ರಯತ್ನ ಮಾಡಬೇಡಿ ಎಂದು ರಾಜ್ಯ ಸರಕಾರಕ್ಕೆ ಚಾಟಿ ಬೀಸಿದರು.
 
ಬಹಿರಂಗ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದ ನೀಡುವುದನ್ನು ಕಲಿತುಕೊಳ್ಳಿ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು. 
 
ಕೆಎಟಿ ತೀರ್ಪು ನ್ಯಾಯಕ್ಕೆ ಸಂದ ಜಯ....
 
2011 ರ ಸಾಲಿನ ಕೆಪಿಎಸ್‌ಸಿ ಅಭ್ಯರ್ಥಿಗಳ ನೇಮಕಾತಿಗೆ ಕೆಎಟಿ ನೀಡಿರುವ ತೀರ್ಪು ನ್ಯಾಯಕ್ಕೆ ಸಂದ ಜಯ. ತೀರ್ಪು ಪ್ರಶ್ನಿಸಿ ಮತ್ತೆ ಮೇಲ್ಮನವಿ ಸಲ್ಲಿಸಿ ಅಭ್ಯರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡಬೇಡಿ ಎಂದು ರಾಜ್ಯ ಸರಕಾರಕ್ಕೆ ಕಿವಿಮಾತು ಹೇಳಿದರು. 
 
ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ವಿಚಾರ......
 
ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಖುದ್ದಾಗಿ ಬಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೂ ಅವರ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಕೆ.ಬಿ.ಕೋಳಿವಾಡ್ ಮೀನಾಮೇಷ ಎದುರಿಸುತ್ತಿದ್ದಾರೆ. ಈ ಮೂಲಕ ಅವರು ದೇಶದ ರಾಜಕೀಯ ಇತಿಹಾಸದಲ್ಲಿಯೇ ಹೊಸ ಸಂಪ್ರದಾಯ ಸೃಷ್ಟಿಸಲು ಹೊರಟಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ