ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶುಕ್ರವಾರ 328 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,159ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 328 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ನಿನ್ನೆ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ನಿನ್ನೆ ಕೋವಿಡ್ ನಿಂದ 409 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7205 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಸೋಂಕಿತರಲ್ಲಿ 1,087 ಮಂದಿ ಮನೆ ಆರೈಕೆಗೆ ಒಳಗಾದರೆ, 72 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 9 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.