ಇದು ಸಿಎಂ ಪ್ರಕಾರ ಟಿಪ್ಪಣಿಯೋ.. ಒಕ್ಕಣೆಯೋ..ಅಥವಾ ಅಪ್ಪಣೆಯೋ: ಎಚ್‌ ಡಿ ಕುಮಾರಸ್ವಾಮಿ

Sampriya

ಶುಕ್ರವಾರ, 23 ಆಗಸ್ಟ್ 2024 (14:47 IST)
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಧ್ಯೆ ವಾಕ್ಸಮರ ಹಾಗೇ ಮುಂದುವರೆದಿದೆ. ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರು ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ, ಬೆನ್ನಲ್ಲೇ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧದ ಗಣಿ ಹಗರಣವನ್ನು ಕಾಂಗ್ರೆಸ್ ನಾಯಕರು ಪ್ರಶ್ನೆ ಮಾಡುತ್ತಿದ್ದಾರೆ.

ಗಣಿ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಎಚ್ ಡಿ ಕುಮಾರಸ್ವಾಮಿ ಬಳಿ ಹಲವು ಪ್ರಶ್ನೆಗಳನ್ನು ಮುಂದಿಟ್ಟರು. ಇವರಿಬ್ಬರ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ವಾದ ಪ್ರತಿವಾದಗಳು ನಡೆಯುತ್ತಿದೆ.

ಇದೀಗ ಎಚ್ ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರಲ್ಲಿ ಹಲವು ಪ್ರಶ್ನೆ ಕೇಳಿದ್ದಾರೆ.

ಸನ್ಮಾನ್ಯ ಸಿಎಂ ಸಿದ್ದರಾಮಯ್ಯ ನವರೇ.. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ.

ನೀವು ಸ್ವಯಂಘೋಷಿತ ವಕೀಲರಲ್ಲವೇ?

ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ.

"50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ 'ಒತ್ತಾಯ' ಮಾಡಿದ್ದಾರೆ!!"

"ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು  ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ."

ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ?

ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..?

ಸೂಪರ್ ಸಿಎಂ ಅವರೇ 'ಒತ್ತಾಯಿಸಿರುತ್ತಾರೆ!!!' ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು?

ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ.

ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..??

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ