ಸಿಗಲಿದೆಯೇ ರಾಜ್ಯದಾದ್ಯಂತ ಕಾರ್ಮಿಕರಿಗೆ ಉಚಿತ ಬಸ್ಸು ಪಾಸ್..?

ಸೋಮವಾರ, 13 ಡಿಸೆಂಬರ್ 2021 (19:41 IST)
ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಈಗಾಗಲೇ ಈ ಉಚಿತ ಬಸ್ಸು ಪಾಸ್ ಸೇವೆಯನ್ನು ಜಾರಿಗೊಳಿಸಿರುವ ಕಾರ್ಮಿಕ ಕಲ್ಯಾಣ ಮಂಡಳಿಯು ಈ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸುತ್ತಿದೆ.
ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರ ಪ್ರಯತ್ನ ಫಲವಾಗಿ ಈ ಸಂಬಂಧ ಸಾರಿಗೆ ಇಲಾಖೆ ಜೊತೆ ಹಲವಾರು ಸುತ್ತಿನ ಮಾತುಕತೆಗಳು ನಡೆದಿವೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗಾಗಲೇ ಈ ಯೋಜನೆಯನ್ನು ಜಾರಿಗೊಳಿಸಿದೆ. ದಿನ ನಿತ್ಯ ಕೂಲಿಗಾಗಿ ತೆರಳುವ ಕಟ್ಟಡ ಕಾರ್ಮಿಕರಿಗೆ ಈ ಯೋಜನೆ ಪ್ರಯೋಜನಕಾರಿಯಾಗಿದೆ. ಪ್ರತಿ ನಿತ್ಯ ಅವರು ಕೆಲಸ ನಿರ್ವಹಣೆಗೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತೆರಳಲು ವ್ಯಯಿಸಬೇಕಾದ 150-200 ರೂ. ಉಳಿತಾಯವಾಗುತ್ತಿದೆ.
ಕಾರ್ಮಿಕ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರು ಈ ಯೋಜನೆ ಲಾಭ ಪಡೆಯಬಹುದಾಗಿದೆ ಎಂದು ಇಲಾಖೆ ತಿಳಿಸಿದೆ.
ಈಗಾಗಲೇ ಬೆಂಗಳೂರು ಮಹಾನಗರದಲ್ಲಿ ಜಾರಿ ಆಗಿರುವ ಉಚಿತ ಸಾರಿಗೆ ಸೇವೆಯನ್ನು ರಾಜ್ಯದಾದ್ಯಂತ ವಿಸ್ತರಣೆ ಮಾಡಲು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮುಂದಾಗಿದ್ದಾರೆ. ಕೆಎಸ್‌ಆರ್‌ಟಿಸಿ, ಈಶಾನ್ಯ, ವಾಯವ್ಯ ಸಾರಿಗೆ ಹೀಗೆ ಎಲ್ಲ ಸಾರಿಗೆ ಸಂಸ್ಥೆಗಳೊಂದಿಗೆ ಯೋಜನೆ ತ್ವರಿತ ಅನುಷ್ಠಾನ ಸಂಬಂಧ ಮಹತ್ವದ ಸಭೆಗಳನ್ನು ನಡೆಸಲಾಗಿದೆ. ಶೇ.100ರಷ್ಟು ಮೊತ್ತವನ್ನು ಕಾರ್ಮಿಕ ಇಲಾಖೆಯಿಂದ ಪಾವತಿಸಿ ರಾಜ್ಯದಾದ್ಯಂತ ಜಾರಿ ಮಾಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಾಗಿ ಶೀಘ್ರವೇ ರಾಜ್ಯದಾದ್ಯಂತ ಶ್ರಮಿಕ ವರ್ಗಕ್ಕೆ ಉಚಿತ ಬಸ್ ಪಾಸ್ ನೀಡುವ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ವೇದಿಕೆ ಸಿದ್ಧಗೊಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ