ತನ್ನ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ ನಾಯಕರು, ವಿಜಯೇಂದ್ರನಿಗೆ ಪಟ್ಟ ನೀಡಿದ್ದಾರೆಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಟೀಕೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕೇಂದ್ರ ಬಿಜೆಪಿ ನಾಯಕರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಕಡೆಗಣಿಸಿದ್ದರು. ಆ ತಪ್ಪು ಮುಚ್ಚಿಕೊಳ್ಳಲು ಈಗ ಅವರ ಪುತ್ರನಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿದ್ದಾರೆ. ಆದರೆ, ನಿಜವಾಗಿಯೂ ಇದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಜವಾಬ್ದಾರಿ ಹೊರಿಸುವಂತಹುದ್ದಾಗಿದೆ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.
ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದೆ. ಸ್ವಾಗತ. ಆದರೆ, ಅದನ್ನು ಸಮರ್ಥವಾಗಿ ಬಳಸಿಕೊಳ್ಳಲಿ. ಕೇವಲ ಆಡಳಿತ ಪಕ್ಷ ಟೀಕಿಸುವ ಮನೋಭಾವ ಬಿಟ್ಟು, ಜನರ ನೋವುಗಳಿಗೆ ಸ್ಪಂದಿಸುವ ಕೆಲಸ ಮಾಡಲಿ ಎಂದರು. ಪಂಚ ರಾಜ್ಯಗಳ ಚುನಾವಣೆ ಮುಗಿದ ನಂತರ ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯಲಿದೆ.
ನೈರುತ್ಯ ಪದವೀಧರ ಕ್ಷೇತ್ರದಿಂದ ನಾನು ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದ್ದು, ಲೋಕಸಭೆ ಮತ್ತು ವಿಧಾನಸಭೆ ಅನುಭವ ಕೂಡ ನನಗಿದೆ. ಸಾವಿರಾರು ಸರ್ಕಾರಿ ನೌಕರರ ಹಾಗೂ ಪದವೀಧರರ ಒಡನಾಟ ಹೊಂದಿರುವ ನನಗೆ ಟಿಕೆಟ್ ಸಿಕ್ಕರೆ ಗೆಲ್ಲುವ ವಿಶ್ವಾಸವಿದೆ ಎಂದ್ರು.