ಕಾವೇರಿ ನೀರು ಹಂಚಿಕೆ: ಸಿಎಂ ಜಯಲಲಿತಾ ವಿರುದ್ಧ ದೇವೇಗೌಡ ವಾಗ್ದಾಳಿ

ಬುಧವಾರ, 28 ಸೆಪ್ಟಂಬರ್ 2016 (16:20 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಿಂದ ನೀರು ಬಿಡಿಸಿಕೊಳ್ಳಬೇಕು ಎಂದು ಹಠಮಾರಿ ಧೋರಣೆ ಹಿಡಿದಿರುವ ತಮಿಳುನಾಡು ಸಿಎಂ ಜಯಲಲಿತಾ ಆಸ್ಪತ್ರೆಯಲ್ಲಿ ಮಲಗಿದ್ದೆ ಸಭೆ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಜಲಾಶಯಗಳಲ್ಲಿ ಕುಡಿಯಲು ಮಾತ್ರ ನೀರಿದೆ. ಮತ್ತೆ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಬೇಕು ಎಂದು ಆದೇಶಿಸುವುದು ಏಷ್ಟರ ಮಟ್ಟಿಗೆ ಸರಿ? ಸಂಕಷ್ಟ ಸ್ಥಿತಿಯಲ್ಲಿ ನೀರು ಬಿಟ್ಟರೆ ಕುಡಿಯುವ ನೀರು ಸಿಗುತ್ತಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕರ್ನಾಟಕ ಸರಕಾರ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸದ ಸುಪ್ರೀಂಕೋರ್ಟ್, ಕಾವೇರಿ ನದಿಯಿಂದ ಮೂರು ದಿನಗಳ ಕಾಲ ಒಟ್ಟು 18 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ನೀಡಿದೆ.
 
ಉಭಯ ರಾಜ್ಯಗಳ ನಡುವಿನ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ನಾಳೆ ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ಅವರ ನೇತೃತ್ವದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಅಧಿಕಾರಗಳ ಸಭೆ ನಡೆಯಲಿದೆ. ವಿವಾದದಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳ ನಡುವಿನ ಜಲ ವಿವಾದ ಇತ್ಯರ್ಥಗೊಳ್ಳುತ್ತದೆಯೇ ಕಾದು ನೋಡಬೇಕಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ