ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈಬಿಡುವ ಪ್ರಶ್ನೆಯೇ ಇಲ್ಲ: ಯಡ್ಡಿಗೆ ಈಶ್ವರಪ್ಪ ಟಾಂಗ್

ಗುರುವಾರ, 15 ಡಿಸೆಂಬರ್ 2016 (18:55 IST)
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈಬಿಡುವ ಪ್ರಶ್ನೆಯೇ ಇಲ್ಲ. ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ತಮ್ಮ ನಡುವೆ ಯಾವುದೇ ಗೊಂದಲ ಇಲ್ಲ ಎಂದು ಹೇಳಲಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮುನರುಚ್ಚರಿಸಿದ್ದಾರೆ.
 
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಠಾಧಿಪತಿಗಳ ನೇತೃತ್ವದಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದರು. 
 
ಬ್ರಿಗೇಡ್‌ಗೂ ಬಿಜೆಪಿ ಪಕ್ಷಕ್ಕೂ ಯಾವುದೇ ಸಂಬಂಧ ಇರುವುದಿಲ್ಲ. ಯಡಿಯೂರಪ್ಪ ಹಾಗೂ ತಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ ಎಂದು ಹೇಳಲಾರೆ. ಇದೆಲ್ಲ ಸರಿಹೋಗುವ ಸಂಗತಿಗಳು. ಈ ಕುರಿತು ಮಾಧ್ಯಮಗಳ ಗೊಂದಲ ಸೃಷ್ಟಿಸಬಾರದು ಎಂದು ಮನವಿ ಮಾಡಿಕೊಂಡರು. 
 
ಕೇಂದ್ರದ ಬಿಜೆಪಿ ನಾಯಕರಿಗೆ ಎಲ್ಲ ವಿಷಯಗಳ ಕುರಿತು ಮಾಹಿತಿ ಇದೆ. ಬ್ರಿಗೇಡ್ ಕುರಿತು ನಮಗೆ ಯಾವುದೇ ನೋಟಿಸ್ ನೀಡಿಲ್ಲ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಹೇಳಿದ ಹಾಗೆ ನಡೆದುಕೊಳ್ಳುತ್ತೇನೆ ಎಂದರು. 
 
ದಲಿತರು ಹಾಗೂ ಹಿಂದುಳಿದವರ ಸಹಾಯಕ್ಕಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೆಲಸ ಮಾಡಲಿದೆ. ಇದರಿಂದ ಬಿಜೆಪಿ ಪಕ್ಷಕ್ಕೆ ಬಲ ಬರುತ್ತದೆಯೇ ಹೊರತು ಯಾವುದೇ ತೊಂದರೆಯಾಗುವುದಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ