ರಸ್ತೆಗುಂಡಿ ಮುಚ್ಚಲು ಆಗ್ರಹಿಸಿ ‘ಕೈ’ ಪ್ರೊಟೆಸ್ಟ್
ಬೆಂಗಳೂರಿನಲ್ಲಿ ಡೆಡ್ಲಿ ರಸ್ತೆಗುಂಡಿಗಳಿಗೆ ಅಮಾಯಕರ ಬಲಿಯಾಗುತ್ತಿರುವ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಅಸ್ತ್ರ ಪ್ರಯೋಗಿಸುತ್ತಿದೆ. ರಸ್ತೆ ಗುಂಡಿಗಳನ್ನ ಮುಚ್ಚದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆಗಿಳಿದಿದ್ದಾರೆ. ಬೆಂಗಳೂರಿನ ಆನಂದ್ ರಾವ್ ಸರ್ಕಲ್ನಿಂದ ಸಿಎಂ ನಿವಾಸದವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಶಾಸಕ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್, ಮಾಜಿ ಶಾಸಕ ಪ್ರಿಯಕೃಷ್ಣ, ಮಾಜಿ ಮೇಯರ್ ಪದ್ಮಾವತಿ, ಮಂಜುನಾಥ್ ರೆಡ್ಡಿ ಭಾಗಿಯಾಗಿದ್ದಾರೆ. ಇನ್ನು ಮಾಜಿ ಕಾರ್ಪೊರೇಟರ್ಗಳಿಂದ ಹಿಡಿದು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ರಸ್ತೆಗುಂಡಿಗಳನ್ನು ಮುಚ್ಚಲು ಆಗ್ರಹಿಸಿರುವುದರ ಜೊತೆ ಕಾಂಗ್ರೆಸ್ ಶಾಸಕರಿಗೆ ಅನುದಾನ ತಾರತಮ್ಯ ಖಂಡಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ, ಬಿಬಿಎಂಪಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆ ನಗರ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.