ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಬೆಂಬಲಿಗರು ಪ್ಯಾಂಪ್ಲೆಟ್ ಅಂಟಿಸಿ ವಿಶಿಷ್ಟವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.
ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿ ಎಬ್ಬಿಸಿದೆ. ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಹೆಸರು ಕೇಳಿಬಂದಿದೆ. ರಾಜು ಕಪನೂರ್ ಬೆದರಿಕೆ, ಕಿರುಕುಳದಿಂದಾಗಿಯೇ ಅತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಚಿನ್ ಡೆತ್ ನೋಟ್ ನಲ್ಲಿ ಬರೆದಿದ್ದ. ಈ ಕಾರಣಕ್ಕೆ ಈಗ ಬಿಜೆಪಿ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸುತ್ತಿದೆ.
ಇಂದು ಬಿಜೆಪಿ ಬೆಂಬಲಿಗರು ಹಲವೆಡೆ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಭಿತ್ತಿಪತ್ರಗಳನ್ನು ಅಂಟಿಸುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ಜನವರಿ 3 ರ ಗಡುವು ವಿಧಿಸಿದೆ. ಬಿಜೆಪಿ ಪ್ರತಿಭಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ತನಿಕೆಯನ್ನು ಸಿಐಡಿಗೆ ಒಪ್ಪಿಸಿದೆ.
ಈ ನಡುವೆ ಪ್ರಿಯಾಂಕ್ ಖರ್ಗೆಯನ್ನು ಹೈಕಮಾಂಡ್ ದೆಹಲಿಗೆ ಕರೆಸಿದ್ದು ಈ ಬಗ್ಗೆ ಮಾತುಕತೆ ನಡೆಸಲಿದೆ. ಎರಡು ದಿನಗಳ ಕಾಲ ಪ್ರಿಯಾಂಕ್ ಖರ್ಗೆ ದೆಹಲಿಯಲ್ಲೇ ಇದ್ದು ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಯಾವುದೇ ಕಾರಣಕ್ಕೂ ಪ್ರಿಯಾಂಕ್ ಖರ್ಗೆ ರಾಜೀನಾಮೆ ಇಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಆಗಿ ಹೇಳಿದೆ. ಆದರೆ ಹಿಂದೆಂದೂ ಈ ರೀತಿ ಶಾಸಕರು, ಸಚಿವರ ಕಿರುಕುಳದಿಂದ ಸರಣಿ ಸಾವಾಗಿರಲಿಲ್ಲ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.