ರಾಜ್ಯ ಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

Krishnaveni K

ಬುಧವಾರ, 14 ಫೆಬ್ರವರಿ 2024 (16:42 IST)
ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕರ್ನಾಟಕದ ನಾಲ್ಕು ಸ್ಥಾನಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಪ್ರಕಟ ಮಾಡಿದೆ. ಇದರಲ್ಲಿ ಹೊಸಬರಿಗೆ ಅವಕಾಶ ನೀಡಲಾಗಿದೆ.

ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಇಂದು ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಒಟ್ಟು ಮೂರು ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಪೈಕಿ ಇಬ್ಬರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದ್ದು, ಓರ್ವ ಹೊಸಬರಿಗೂ ಅವಕಾಶ ನೀಡಲಾಗಿದೆ.

ಜಿ.ಸಿ. ಚಂದ್ರಶೇಖರ್ ಮತ್ತು ನಾಸಿರ್ ಹುಸೇನ್ ಗೆ ಮತ್ತೊಮ್ಮೆ ಟಿಕೆಟ್ ನೀಡಲಾಗಿದೆ. ಎಐಸಿಸಿ ಖಜಾಂಜಿ ಅಜಯ್ ಮಕೇನ್ ಗೆ ಹೊಸದಾಗಿ ಅವಕಾಶ ನೀಡಲಾಗಿದೆ. ದೆಹಲಿ ಮೂಲದ ಅಜಯ್ ಮಕೇನ್ ಈ ಮೊದಲು ಲೋಕಸಭಾ ಸದಸ್ಯರಾಗಿದ್ದರು. ಆದರೆ ಈಗ ರಾಜ್ಯಸಭೆಯಿಂದ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಬಾರಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಕೂಡಾ ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದಾರೆ. ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ರಾಜಸ್ಥಾನ್ ನಿಂದ ಅವರು ಸ್ಪರ್ಧಿಸುತ್ತಿದ್ದಾರೆ. ಅನಾರೋಗ್ಯದ ಕಾರಣದಿಂದ ಅವರು ಲೋಕಸಭಾ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ.

ಕಾಂಗ್ರೆಸ್ ತೆಲಂಗಾಣದಿಂದ ರೇಣುಕಾ ಚೌಧರಿ, ಅನಿಲ್ ಕುಮಾರ್ ಯಾದವ್ ಗೆ ಟಿಕೆಟ್ ನೀಡಿದೆ. ಮಧ್ಯಪ್ರದೇಶದಲ್ಲಿ ಅಶೋಕ್ ಸಿಂಗ್ ಗೆ ಟಿಕೆಟ್ ನೀಡಲಾಗಿದೆ. ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೀಗಾಗಿ ಎಲ್ಲಾ ರಾಜಕೀಯ ಪಕ್ಷಗಳೂ ತಮ್ಮ ಅಭ್ಯರ್ಥಿಗಳನ್ನು ಫೈನಲ್ ಮಾಡಿಕೊಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ