ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್

ಬುಧವಾರ, 2 ಸೆಪ್ಟಂಬರ್ 2015 (17:50 IST)
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸುಕಿನ ಗುದ್ದಾಟ ಮುಂದುವರಿದಿದೆ. ಇದೀಗ ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗದ ಸಮುದಾಯಗಳು ಕಾಂಗ್ರೆಸ್ ಪಕ್ಷದಿಂದ ದೂರವಾಗುತ್ತಿವೆ ಎನ್ನುವುದಕ್ಕೆ ಬಿಬಿಎಂಪಿ ಪಾಲಿಕೆ ಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಪರಮೇಶ್ವರ್ ಪರೋಕ್ಷವಾಗಿ ಟೀಕಿಸಿದ್ದಾರೆ.
 
ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕಾಂಗಿಯಾಗಿ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಕೇವಲ 76 ಸ್ಥಾನಗಳಲ್ಲಿ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಬಿಬಿಎಂಪಿಯಲ್ಲಿ ಅಡಳಿತ ನಡೆಸಲು ಪ್ರಯತ್ನಿಸುತ್ತಿದೆ.  
 
ಸಿಎಂ ಸಿದ್ದರಾಮಯ್ಯ ತಮ್ಮನ್ನು ತಾವು ಅಹಿಂದದ ನಾಯಕರು ಎನ್ನುವಂತೆ ಬಿಂಬಿಸಿಕೊಳ್ಳುತ್ತಿದ್ದರು. ಆದರೆ, ಇತರ ಸಮುದಾಯಗಳನ್ನು ನಿರ್ಲಕ್ಷಿಸಿ ಕೇವಲ ಕುರುಬ ಸಮುದಾಯದ ಜನತೆಗೆ ಹೆಚ್ಚಿನ ಅವಕಾಶ ನೀಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ ಎಂದು ಹೇಳಿದ್ದಾರೆ.
 
ಸಿಎಂ ಸಿದ್ದರಾಮಯ್ಯ ವರ್ತನೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನೆಡೆಯಾಗಿದೆ. ಆದ್ಯತೆಯ ಮೇರೆಗೆ ಇತರ ಸಮುದಾಯಗಳನ್ನು ಗೌರವಿಸಬೇಕಾಗಿದೆ. ಇಲ್ಲವಾದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಎಂದು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ