ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಬಿಡುಗಡೆ: ಸರಕಾರಿ ಬಸ್ ಪುಡಿ ಪುಡಿ

ಮಂಗಳವಾರ, 6 ಸೆಪ್ಟಂಬರ್ 2016 (18:40 IST)
ರಾಜ್ಯ ಸರಕಾರ ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ವಿರೋಧಿಸಿದ ಪ್ರತಿಭಟನಾಕಾರರು ಎರಡು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಡಿ ಪುಡಿ ಮಾಡಿರುವ ಘಟನೆ ವರದಿಯಾಗಿದೆ.
 
ಸರ್ವಪಕ್ಷಗಳ ಸಭೆ ನಡೆಯುವ ಮುಂಚೆಯೇ ಸರಕಾರ ತಮಿಳುನಾಡಿಗೆ ನೀರು ಹರಿಸಿರುವುದು ರೈತರಲ್ಲಿ ಮತ್ತು ವಿಪಕ್ಷ ನಾಯಕರುಗಳಲ್ಲಿ ಆಕ್ರೋಶ ಮೂಡಿಸಿದೆ.
 
ಒಂದು ವೇಳೆ, ತಮಿಳುನಾಡಿಗೆ ನೀರು ಹರಿಸುವುದೇ ಆಗಿದ್ದಲ್ಲಿ ಯಾವ ಪುರುಷಾರ್ಥಕ್ಕಾಗಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು ಎಂದು ಮಂಡ್ಯ ಜಿಲ್ಲೆಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸುವ ನಿಟ್ಟಿನಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ, ನಂತರ ಮೇಲ್ಮನವಿ ಸಲ್ಲಿಸಲು ಅವಕಾಶ ವಿರುವ ಹಿನ್ನೆಲೆಯಲ್ಲಿ ನೀರು ಬಿಡುಗಡೆ ಮಾಡಲಾಗಿದೆ. ಒಂದು ವೇಳೆ, ನೀರು ಬಿಡುಗಡೆ ಮಾಡದಿದ್ದಲ್ಲಿ ರಾಜ್ಯ ಸರಕಾರ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೆ. ತದನಂತರ ಯಾವುದೇ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಸರಕಾರದ ಮೂಲಗಳು ತಿಳಿಸಿವೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ