ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಕರಾವಳಿ ಜಿಲ್ಲೆ ಸೇರಿದಂತೆ ಈ 7 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗಲಿರುವುದಾಗಿ ವರದಿಯಾಗಿದೆ. ನಿನ್ನೆ ರಾತ್ರಿಯೂ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬಾಗಲಕೋಟೆ, ಬೆಳಗಾವಿಯಲ್ಲೂ ಭಾರೀ ಮಳೆಯಾಗುತ್ತಿದೆ.
ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟಿನಲ್ಲಿ ಭೂ ಕುಸಿತವಾಗಿದೆ. ಇದರಿಂದಾಗಿ ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿದೆ. ಶಿರಾಡಿ ಘಾಟಿಯಲ್ಲಿ ನಿನ್ನೆ ಪರಿಸ್ಥಿತಿ ಸಹಜವಾಗಿತ್ತು. ಮಂಗಳೂರು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ದಕ್ಷಿಣ ಕನ್ನಡದ ಪ್ರಮುಖ ಸ್ಥಳಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿಯಷ್ಟಿದೆ. ಕನಿಷ್ಠ ತಾಪಮಾನ 19 ಡಿಗ್ರಿಯಷ್ಟಿದೆ. ಮಧ್ಯಾಹ್ನದ ನಂತರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಲವೆಡೆ ಪ್ರವಾಹ ಸದೃಶ ವಾತಾವರಣವಿದೆ. ಈ ವಾತಾವರಣ ಇನ್ನೂ ಒಂದು ವಾರಗಳ ಕಾಲ ಮುಂದುವರಿಯುವ ನಿರೀಕ್ಷೆಯಿದೆ.