ಅವರು ಇಂದು ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರು ನಡೆಸಿದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ, ರಾಜ್ಯದ ಈ ನಿಲುವನ್ನು ಸ್ಪಷ್ಟಪಡಿಸಿದರು.
ಕರ್ನಾಟಕ ರಾಜ್ಯ ಅತಿ ಹೆಚ್ಚು ಅರಣ್ಯ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನಮ್ಮ ಸರಕಾರ ಹಾಗೂ ಜನತೆ ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರಿದ್ದೇವೆ. ಯಾವುದೇ ಕಾಯ್ದೆ ಕಾನೂನು ಜಾರಿಯಾಗುವ ಮುನ್ನವೂ ಈ ಭಾಗದ ಜನರು ಇಲ್ಲಿನ ಪ್ರಕೃತಿಗೆ ಸಹಜವಾದ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ. ಪಶ್ಚಿಮ ಘಟ್ಟದ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ. ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯ್ದೆ, ಅರಣ್ಯ ಸಂರಕ್ಷಣೆ ಕಾಯ್ದೆ ಮೊದಲಾದ ಹಲವಾರು ಕಾನೂನುಗಳಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಸಭೆಯಲ್ಲಿ ಸಚಿವರಾದ ಅರಗ ಜ್ಞಾನೇಂದ್ರ, ಆನಂದ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸೇರಿದಂತೆ ಇತರರು ಉಪಸ್ಥಿತರಿದ್ದರು.