ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಮತ್ತಷ್ಟು ಚುರುಕಾಗಿದ್ದು ಮುಂದಿನ ಮೂರು ದಿನಗಳಿಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ನಿರಂತರ ಮಳೆಯಾಗುತ್ತಲೇ ಇದೆ. ಇಂದೂ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳಿವೆ. ಆದರೆ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದೆ.
ಜುಲೈ 14 ರವರೆಗೂ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ವರದಿಗಳು ಹೇಳಿವೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಚಿಕ್ಕಮಗಳೂರು, ತುಮಕೂರು, ಹಾಸನ, ಕೊಡಗು, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ, ಧಾರವಾಡ, ಹುಬ್ಬಳ್ಳಿ, ವಿಜಯಪುರ, ದಾವಣಗೆರೆ ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ.