ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಿಡದೇ ಅಲ್ಲಲ್ಲಿ ಮಳೆಯಾಗುತ್ತಿತ್ತು. ಆದರೆ ರಾಜ್ಯದ ವಿವಿಧ ಭಾಗಗಳಿಗೆ ಇಂದು ವರುಣ ಒಂದು ದಿನದ ರಜೆ ಪಡೆದಿದ್ದಾನೆ. ಇಂದಿನ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ ನೋಡಿ.
ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿತ್ತು. ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿತ್ತು. ಇನ್ನು ಕೆಲವೆಡೆ ತುಂತುರು ಮಳೆಯಾಗಿತ್ತು.
ಆದರೆ ಇಂದು ಒಂದು ದಿನದ ಮಟ್ಟಿಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಿರುವುದಿಲ್ಲ. ಬದಲಾಗಿ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಶಿವಮೊಗ್ಗ, ಹಾವೇರಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು ಹಗಲು ಬಿಸಿಲು ಮತ್ತು ಅಪರಾಹ್ನದ ಬಳಿಕ ಸ್ವಲ್ಪ ಮೋಡಕವಿದ ವಾತಾವರಣವಿರಲಿದೆ.
ವಿಶೇಷವಾಗಿ ಬಳ್ಳಾರಿ, ರಾಯಚೂರಿನಂತಹ ಉತ್ತರ ಭಾಗದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ 40 ಡಿಗ್ರಿ ತಲುಪಲಿದೆ ಎಂದು ತಿಳಿದುಬಂದಿದೆ. ಇನ್ನು, ರಾಜ್ಯದಲ್ಲಿ ಒಟ್ಟಾರೆಯಾಗಿ ಸರಾಸರಿ ಗರಿಷ್ಠ ತಾಪಮಾನ 34 ಡಿಗ್ರಿಯಷ್ಟರಲಿದೆ ಎಂದು ತಿಳಿದುಬಂದಿದೆ.