ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಿದೆ. ಕಳೆದ ಒಂದು ವಾರದಿಂದ ಕರಾವಳಿ ಜಿಲ್ಲೆಗಳಲ್ಲಿ ಕೊಂಚ ಮಟ್ಟಿಗೆ ಮಳೆಯ ಅಬ್ಬರ ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ಮಳೆ ಶುರುವಾಗಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬ್ 1 ರವರೆಗೂ ಕರಾವಳಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ವಾರ ಸಾಧಾರಣ ಮಳೆಯಾಗಿತ್ತು. ಇದೀಗ ಮೋಡ ಕವಿದ ವಾತಾವರಣವಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಸಣ್ಣ ಮಟ್ಟಿನ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಗರಿಷ್ಠ ಉಷ್ಣಾಂಶ 29.5 ಡಿಗ್ರಿ ತಾಪಮಾನವಿದ್ದು, ಕನಿಷ್ಠ 19.8 ಡಿಗ್ರಿ ತಾಪಮಾನವಿದೆ. ಮುಂದಿನ ಕೆಲವು ದಿನಗಳ ಕಾಲ ಮೋಡ ಕವಿದ ವಾತಾವರಣ, ಸಣ್ಣ ಮಳೆಯ ಹವಾಮಾನ ಮುಂದುವರಿಯಲಿದೆ.