ಬೆಂಗಳೂರು: ರಾಜ್ಯದಲ್ಲಿ ನಿನ್ನೆಯಿಂದ ಮತ್ತೆ ಮಳೆಯ ಅಬ್ಬರ ಶುರುವಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮತ್ತೆ ಕರಾವಳಿ, ಮಲೆನಾಡಿನಲ್ಲಿ ಮಳೆಯಾಗುತ್ತಿದೆ.
ಕರ್ನಾಟಕದಲ್ಲಿ ಕಳೆದ ವಾರ ಆರಂಭದಲ್ಲಿ ಉತ್ತಮ ಮಳೆಯಾಗಿತ್ತು. ಆದರೆ ಈ ವಾರ ಆರಂಭದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿತ್ತು. ಮಂಗಳವಾರ ಕೆಲವು ಕಡೆ ಮಾತ್ರ ಸಾಧಾರಣ ಮಳೆಯಾಗಿತ್ತು. ಆದರೆ ನಿನ್ನೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಿತ್ತು. ಇಂದೂ ಕೂಡಾ ಒಟ್ಟಾರೆಯಾಗಿ ಮಳೆ ನಿರೀಕ್ಷಿಸಲಾಗಿದೆ.
ಕರಾವಳಿ ನಗರಿಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಧಾರವಾಡದಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ.
ಉಳಿದಂತೆ ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಯಾದಗಿರಿ, ಕಲಬುರಗಿ, ರಾಯಚೂರು, ಹುಬ್ಬಳ್ಳಿ, ಗದಗ, ಕೊಪ್ಪಳ, ಬೀದರ್, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.