ಬೆಂಗಳೂರು: ರಾಜ್ಯದಲ್ಲಿ ಇಂದೂ ಕೆಲವೆಡೆ ಧಾರಾಕಾರ ಮಳೆ ಮುಂದುವರಿಯಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಯವರು ಇಂದು ಎಚ್ಚರಿಕೆಯಿಂದಿರಬೇಕು ಎಂದು ಹವಾಮಾನ ವರದಿಗಳು ಹೇಳುತ್ತಿವೆ.
ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದೆ. ಅದರಲ್ಲೂ ವಿಶೇಷವಾಗಿ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇಂದೂ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಎಚ್ಚರಿಕೆ ನೀಡಿವೆ.
ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಇಲ್ಲಿ ಹಲವು ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಲೇ ಇದೆ. ಇಂದೂ ಭಾರೀ ಮಳೆಯಾಗುವ ಸೂಚನೆಯಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ರಾಯಚೂರು, ಹಾವೇರಿ, ಹುಬ್ಬಳ್ಳಿ, ಧಾರವಾಡ, ಕೊಪ್ಪಳ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ತಿಳಿದುಬಂದಿದೆ.