ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು ಗುಡ್ಡ ಕುಸಿತದ ಭೀತಿ ಎದುರಾಗಿದೆ. ಕರ್ನಾಟಕದಲ್ಲಿ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ.
ಕರ್ನಾಟಕದ ಕರಾವಳಿ ಜಿಲ್ಲೆಯಾದ ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ನದಿಗಳು ಉಕ್ಕಿ ಹರಿಯುತ್ತಿವೆ. ಇನ್ನೊಂದೆಡೆ ಗುಡ್ಡ ಕುಸಿತದ ಭೀತಿ ಎದುರಾಗಿದೆ.
ಹವಾಮಾನ ಇಲಾಖೆ ಈಗಾಗಲೇ ಮುಂದಿನ ನಾಲ್ಕು ದಿನಗಳವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯ ಸೂಚನೆ ನೀಡಿತ್ತು. ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ ಮಳೆ ಕೊಂಚ ಕಡಿಮೆಯಾಗಿದ್ದರೂ ದಿನವಿಡೀ ಮೋಡ ಕವಿದ ವಾತಾವರಣವಿತ್ತು.
ಭಾರೀ ಮಳೆಯಿಂದಾಗಿ ಉತ್ತರ ಕನ್ನಡ, ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಓರ್ವ ಮಹಿಳೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಹಲವು ಮನೆಗಳಿಗೆ ನೀರು ನುಗ್ಗಿದ್ದು ಎನ್ ಡಿಆರ್ ಎಫ್ ಸಿಬ್ಬಂದಿಯನ್ನು ಕಳುಹಿಸಲಾಗಿದೆ. ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡದ ಪ್ರವಾಸೀ ತಾಣಗಳಿಗೆ ಸದ್ಯಕ್ಕೆ ನಿಷೇಧ ಹೇರಲಾಗಿದೆ. ಇನ್ನೂ ಕೆಲವು ದಿನ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.