ತಮಿಳುನಾಡಿಗೆ ನೀರು ಬಿಡಲು ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಪ್ರತಿಭಟನೆ
ಸೋಮವಾರ, 19 ಸೆಪ್ಟಂಬರ್ 2016 (19:27 IST)
ರಾಜ್ಯ ಸರಕಾರದ ವಾದವನ್ನು ಒಪ್ಪದ ಕಾವೇರಿ ಮೇಲುಸ್ತುವಾರಿ ಸಮಿತಿ ಮುಂದಿನ 10 ದಿನಗಳ ಕಾಲ ಪ್ರತಿದಿನ ಮೂರು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಆರಂಭಿಸಿದ್ದಾರೆ.
ಕಾವೇರಿ ಮೇಲುಸ್ತುವಾರಿ ಸಮಿತಿ ಆದೇಶ ಹೊರ ಬೀಳುತ್ತಿದ್ದಂತೆ ಪ್ರತಿಭಟನಾಕಾರರು , ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಸಂಜಯ್ ವೃತ್ತದಲ್ಲಿ ಜಮಾವಣೆಗೊಂಡು ಸಿಎಂಸಿ ಸಮಿತಿ ವಿರುದ್ಧ ಧಿಕ್ಕಾರ ಕೂಗಿದ ಘಟನೆ ವರದಿಯಾಗಿದೆ.
ಬೆಂಗಳೂರು-ಮೈಸೂರು ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಕಾವೇರಿ ಮೇಲುಸ್ತುವಾರಿ ಸಮಿತಿ ಸದಾ ರಾಜ್ಯಕ್ಕೆ ಅನ್ಯಾಯವೆಸಗುತ್ತಿದ್ದು, ಸಮಿತಿಯ ಆದೇಶ ರೈತರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ ಎಂದು ಕಿಡಿಕಾರಿದ್ದಾರೆ.
ಕಾವೇರಿ ಹಿತರಕ್ಷಣೆ ಸಮಿತಿಯ ಅಧ್ಯಕ್ಷ ಜಿ. ಮಾದೇಗೌಡ ಮಾತನಾಡಿ, ಸೆಪ್ಟೆಂಬರ್ 20 ರ ನಂತರ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದರು. ಇದೀಗ ಅದರಂತೆ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ