ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ. ಸಮಯ ಬಂದಾಗ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ರೇಸ್‌ನಲ್ಲಿ ಡಿ.ಕೆ. ಶಿವಕುಮಾರ್ ಮೊದಲಿನಿಂದಲೂ ಇದ್ದಾರೆ. ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷರನ್ನ ನೇಮಿಸುವ ಅಧಿಕಾರ ನಮಗಿಲ್ಲ, ಅದನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತಕ್ಷಣ ಆಗದೆ ಇರಬಹುದು, ಮುಂದೆಯಾದರೂ ಮಾಡುತ್ತಾರೆ. ಯಾವಾಗ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಾಗಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ನಿಲ್ಲಿಸಿಲ್ಲ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಮುಂಬರುವ ದಿನಗಳಲ್ಲಿ ಎರಡೂ ತಿಂಗಳ ಹಣವನ್ನು ಒಟ್ಟಿಗೆ ಸೇರಿಸಿಕೊಡಬಹುದು. ಸರ್ಕಾರದ ಮಟ್ಟದಲ್ಲಿ ಹಣ ನೀಡುವುದು ವಿಳಂಬವಾಗುವುದು ಸಹಜ ಎಂದರು.