ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್‌ನಲ್ಲಿ ಗುರುವಾರ ಅಶ್ಲೀಲ ಪದಬಳಕೆ ಮಾಡಿದ ಆರೋಪದಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದೀಗ ಸಿಟಿ ರವಿ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಸಿಟಿ ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀಡಿದ ದೂರಿನ್ವಯ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75, 79ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ವಿರೋಧಿ ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್‌ನಲ್ಲಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಈ ವೇಳೆ ಸಿ.ಟಿ ರವಿ ಅವರು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕಾಂಗ್ರೆಸ್ ನಾಯಕರು ಸಿಟಿ ರವಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡರು ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ. ಸಿ.ಟಿ ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.