ಸಮಗ್ರ ಅಭಿವೃದ್ಧಿಗೆ ಭೂಸ್ವಾಧೀನ : ಸಿಎಂ

ಭಾನುವಾರ, 26 ಜೂನ್ 2022 (14:07 IST)
ಬೆಂಗಳೂರು : ಕೊಪ್ಪಳ ಜಿಲ್ಲೆಯ ಕಿಷ್ಕಿಂಧೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆಗೆ ಅಗತ್ಯ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಕಾಮಗಾರಿ ಕೆಲಸವನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾಕೀತು ಮಾಡಿದ್ದಾರೆ.
 
ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆ ಕುರಿತು ಸಭೆ ನಡೆಸಿ ಈ ಸೂಚನೆ ನೀಡಿದರು. ಯೋಜನೆಗಾಗಿ ಸುಮಾರು 60 ಎಕರೆ ಭೂಮಿ ಅಗತ್ಯ ಇದೆ. ಇದರಲ್ಲಿ 58 ಎಕರೆ ಖಾಸಗಿ ಜಮೀನಾಗಿದೆ.

ಇದನ್ನು ರೈತರ ಒಪ್ಪಿಗೆಯ ಮೇರೆಗೆ ಭೂಸ್ವಾಧೀನ ಪಡಿಸಿಕೊಳ್ಳಬೇಕು ಅಥವಾ ಕೆಐಎಡಿಬಿ ಮೂಲಕ ಖರೀದಿಸುವ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.

ಯೋಜನೆಯ ಮೊದಲ ಹಂತದಲ್ಲಿ ಅಂಜನಾದ್ರಿ ಸಂಪರ್ಕ ರಸ್ತೆ ಅಭಿವೃದ್ಧಿ, ಪರ್ಯಾಯ ರಸ್ತೆಗಳನ್ನು ಗುರುತಿಸಿ ಅಭಿವೃದ್ಧಿಪಡಿಸಬೇಕು. ರಾಷ್ಟ್ರೀಯ ಹೆದ್ದಾರಿಯಿಂದ ಗಂಗಾವತಿವರೆಗಿನ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಲೋಕೋಪಯೋಗಿ ಇಲಾಖೆಯ ಮೂಲಕ ಕ್ರಮ ಕೈಗೊಳ್ಳಬೇಕು.

ಇದಕ್ಕೆ ವಿಸ್ತೃತ ಯೋಜನಾ ವರದಿಯನ್ನು ತಕ್ಷಣ ಸಿದ್ಧಪಡಿಸಬೇಕು. ಬೆಟ್ಟದ ಬುಡದಲ್ಲಿ ಯಾತ್ರಿಕರಿಗೆ ಪಾರ್ಕಿಂಗ್ ಸೇರಿದಂತೆ ಇತರೆ ಮೂಲಸೌಕರ್ಯ ಒದಗಿಸುವ ಕುರಿತು ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು. ಯೋಜನೆಯ ಆರ್ಥಿಕ ಅನುಮೋದನೆಗಾಗಿ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ