ಲೋಕಾಯುಕ್ತ ಪ್ರಕರಣ: ಪದಚ್ಯುತಿಗೊಳಿಸುವ ಅಧಿಕಾರ ರಾಜ್ಯಪಾಲರಿಗೆ ಮಾತ್ರ ಎಂದ ಸಿಎಂ

ಸೋಮವಾರ, 6 ಜುಲೈ 2015 (12:13 IST)
ಲೋಕಾಯುಕ್ತ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲೋಕಾಯುಕ್ತರ ರಾಜೀನಾಮೆಗೆ ಆಗ್ರಹ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಲೋಕಾಯುಕ್ತರನ್ನು ಪದಚ್ಯುತಿಗೊಳಿಸುವ ಅಧಿಕಾರ ರಾಜ್ಯಪಾಲರಿಗಿದ್ದು, ಮುಂದಿನ ಕ್ರಮವನ್ನು ಅವರೇ ಕೈಗೊಳ್ಳಲಿದ್ದಾರೆ ಎಂದಿದ್ದಾರೆ. 
 
ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ವಿಧಾನಸಭೆಯ ಕೆಲ ಸದಸ್ಯರು ಸಹಿ ಸಂಗ್ರಹಿಸಿ ಸಭಾಧ್ಯಕ್ಷರಲ್ಲಿ ಮನವಿ ಮಾಡಿದ್ದರೆ, ವಿಧಾನ ಪರಿಷತ್‌ನಲ್ಲಿಯೂ ಕೂಡ ಕೆಲ ಸದಸ್ಯರು ಸಭಾಪತಿಗಳಲ್ಲಿ ಮನವಿ ಸಲ್ಲಿಸಿ ಪದಚ್ಯುತಿಗೆ ಮನವಿ ಸಲ್ಲಿಸಿದ್ದಾರೆ ಎಂದ ಅವರು, ಲೋಕಾಯುಕ್ತರನ್ನು ಪದಚ್ಯುತಿಗೊಳಿಸುವ ಅಧಿಕಾರ ಸರ್ಕಾರಕ್ಕಿಲ್ಲ. ಆ ಅಧಿಕಾರ ಇರುವುದು ಕೇವಲ ರಾಜ್ಯಪಾಲರಿಗೆ ಮಾತ್ರ ಆದ್ದರಿಂದ ಮುಂದಿನ ನಿರ್ಧಾರವನ್ನು ರಾಜ್ಯದ ರಾಜ್ಯಪಾಲ ವಜುಭಾಯಿ ವಾಲಾ ಅವರೇ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು. 
 
ಏನಿದು ಪ್ರಕರಣ?: 
ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಒಂದು ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ್ದ ಬೆಂಗಳೂರು ಲೋಕಾಯುಕ್ತ ಎಸ್‌ಪಿ ಸೋನಿಯಾ ನಾರಂಗ್ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ ಅವರ ತನಿಖೆಗೆ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ತಡೆ ನೀಡಿ ಪ್ರಕರಣವನ್ನು ತಮ್ಮ ಸ್ವಂತ ಅಧಿಕಾರ ಬಳಸಿ ಸಿಸಿಬಿಗೆ ವಹಿಸಿದ್ದರು. 
 
ಈ ಸಂಬಂಧ ಪ್ರತಿಕ್ರಿಯಿಸಿದ್ದ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು, ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ನಡೆಸುವ ಅಧಿಕಾರ ಸಿಸಿಬಿಗೆ ಇದೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಆದರೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುತ್ತಿರುವಾಗಿ ಮುಖ್ಯ ಲೋಕಾಯುಕ್ತರು ತಮ್ಮ ಬಳಿ ಸಲಹೆ ಪಡೆದಿಲ್ಲ ಎಂದು ಆರೋಪಿಸಿದ್ದರು. ಇದು ಲೋಕಾಯುಕ್ತ ಇಲಾಖೆ ಹಾಗೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಈ ಹಿನ್ನೆಲೆಯಲ್ಲಿ ಸ್ವಯಂ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರ, ಪ್ರಸ್ತುತ ವಿಶೇಷ ತನಿಖಾ ತಂಡ ರಚಿಸಿತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಪದಚ್ಯುತಿಗೆ ಆಗ್ರಹಿಸಿವೆ. 
 
ಇನ್ನು ಪ್ರಕರಣದಲ್ಲಿ ಲೋಕಾಯುಕ್ತ ಇಲಾಖೆಯ ಜಂಟಿ ಆಯುಕ್ತ ರಿಯಾಜ್, ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಹಾಗೂ ಅವರ ಸಂಬಂಧಿ ಆಂಧ್ರ ಮೂಲದ ಕೃಷ್ಣ ರಾವ್ ಅಲಿಯಾಸ್ ನರಸಿಂಹ ರಾವ್ ಅವರು ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. 

ವೆಬ್ದುನಿಯಾವನ್ನು ಓದಿ