'ಲೋಕಾ'ದಲ್ಲಿ ಭ್ರಷ್ಟಾಚಾರ ಪ್ರಕರಣ: ತನಿಖೆ ಚುರುಕುಗೊಳಿಸಿದ ಎಸ್ಐಟಿ

ಗುರುವಾರ, 30 ಜುಲೈ 2015 (12:54 IST)
ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಎರಡನೇ ಹಾಗೂ ಮೂರನೇ ಆರೋಪಿಗಳನ್ನು ಇಂದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. 
 
ಹೌದು, ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ, ಎರಡನೇ ಆರೋಪಿ ಅಶೋಕ್ ಕುಮಾರ್ ಹಾಗೂ ಮೂರನೇ ಆರೋಪಿ ಶ್ರೀನಿವಾಸ್ ಗೌಡ ಅವರನ್ನು ಇಂದು ಬೆಳ್ಳಂ ಬೆಳಗ್ಗೆ ವಿಚಾರಣೆ ನಡೆಸುತ್ತಿದೆ. ನಗರದ ರೇಸ್ ಕೋರ್ಸ್ ರಸ್ತೆಯಲ್ಲಿನ ರೇಸ್‌ವ್ಯೂ ಹೋಟೆಲ್‌ಗೆ ಕರೆದೊಯ್ದು ವಿಚಾರಣೆ ನಡೆಸಿದ ಅಧಿಕಾರಿಗಳು, ಬಳಿಕ ಲೋಕಾಯುಕ್ತ ಕಚೇರಿಯಲ್ಲಿಯೂ ಡೀಲಿಂಗ್ ನಡೆಸಲಾಗಿತ್ತು ಎಂಬ ಆರೋಪ ಹಿನ್ನೆಲೆಯಲ್ಲಿ ನಗರದ ಎಂ.ಎಸ್.ಬಿಲ್ಡಿಂಗ್‌ನಲ್ಲಿರುವ ಲೋಕಾಯುಕ್ತ ಕಚೇರಿಗೂ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. 
 
ಒಂದು ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಜಿಲ್ಲಾ ಪಂಚಾಯತ್‌ನ ಲೋಖೋಪಯೋಗಿ ವಿಭಾಗದ ಎಂಜಿನಿಯರ್ ಕೃಷ್ಣಮೂರ್ತಿ ಎಂಬುವವರು ಮುಖ್ಯ ಲೋಕಾಯುಕ್ತರ ಪುತ್ರ ಅಶ್ವಿನ್ ರಾವ್ ಅವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಆದರೆ ಪ್ರಕರಣವು ಲೋಕಾಯುಕ್ತದಲ್ಲಿಯೇ ನಡೆದಿರುವ ಕಾರಣ ಲೋಕಾಯುಕ್ತ ಪೊಲೀಸರೇ ತನಿಖೆ ನಡೆಸುವುದು ಸರಿಯಲ್ಲ ಎಂಬ ಕಾರಣದಿಂದ ತನಿಖಾ ನಿರ್ಧಾರವನ್ನು ಬದಲಿಸಿದ ಸರ್ಕಾರ, ಎಡಿಜಿಪಿ ಕಮಲ್ ಪಂತ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸಿರುವ ಅಧಿಕಾರಿಗಳು, ತನಿಖೆ ಚುರುಕುಗೊಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ