ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಗೆ ರಾಜ್ಯದಲ್ಲಿ ಹೆಚ್ಚು ಕೈ ಹಿಡಿಯಲಿಲ್ಲ. ಹೀಗಾಗಿ ಇದೀಗ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯೇ ಎಂಬ ಪ್ರಶ್ನೆಗೆ ಶಾಸಕ ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಈ ಮೊದಲು ಲೋಕಸಭೆ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಶಾಸಕ ಬಾಲಕೃಷ್ಣ ಕಾಂಗ್ರೆಸ್ ಗೆ ಮತ ಹಾಕಿ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರು. ಇದೀಗ ಮತ್ತೊಮ್ಮೆ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದು, ಜನರು ಗ್ಯಾರಂಟಿ ಯೋಜನೆ ಅಗತ್ಯವಿಲ್ಲ ಎಂದು ನಮಗೆ ಸೂಚನೆ ನೀಡಿದ್ದಾರೆ ಎಂದಿದ್ದಾರೆ.
ಅವರ ಈ ಹೇಳಿಕೆ ನೋಡಿದರೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲು ಚಿಂತನೆ ನಡೆಸುತ್ತಿದೆಯೇ ಎಂಬ ಅನುಮಾನ ಮೂಡಿದೆ. ಲೋಕಸಭೆ ಚುನಾವಣೆ ಫಲಿತಾಂಶ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ ಎಂದಿದ್ದರು. ಆದರೆ ಇದೀಗ ಶಾಸಕ ಬಾಲಕೃಷ್ಣ ಹೇಳಿಕೆ ಗಮನಿಸಿದರೆ ಬೇರೆಯೇ ಅನುಮಾನ ಬರುತ್ತಿದೆ.
ಗ್ಯಾರಂಟಿ ಯೋಜನೆಗಳು ಬೇಡ ಎಂದು ಜನರೇ ಸೂಚನೆ ನೀಡಿದ್ದಾರೆ. ಆದರೆ ಇದನ್ನು ಮುಂದುವರಿಸಬೇಕೋ ಬೇಡವೋ ಎಂದು ತೀರ್ಮಾನಿಸುವಷ್ಟು ದೊಡ್ಡವನು ನಾನಲ್ಲ.ಇದನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಮಂತ್ರಿ ಮಂಡಲ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತದೆ ಎಂದಿದ್ದಾರೆ.