ಮಂಗಳೂರು: ದೇಶದಲ್ಲಿ ಸಂಚಲನ ಮೂಡಿಸಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುಸ್ತಫಾ ಪೈಚಾರ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್ ಆನೆಮಹಲ್ ಬಳಿಯಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ ಮೂಲಗಳು ತಿಳಿಸಿವೆ.
ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರನ್ನು 2022ರ ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಬಂದ್ ಮಾಡಿ ಮನೆಗೆ ವಾಪಾಸ್ಸಾಗುತ್ತಿದ್ದ ವೇಳೆ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು.
ಪುತ್ತೂರು ಆಸ್ಪತ್ರೆಗೆ ಪ್ರವೀಣ್ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದದ್ದರಿಂದ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ದೇಶದಾದ್ಯಂತ ಈ ಪ್ರಕರಣ ಸಂಚಲನ ಮೂಡಿಸಿ, ಪ್ರಕರಣವನ್ನು ಎನ್‌ಐಎಗೆ ವಹಿಸಲಾಗಿತ್ತು. ಈಗಾಗಲೇ ಪ್ರಕರಣ ಸಂಬಂಧ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ಕಳೆದ ವರ್ಷ ಜನವರಿಯಲ್ಲಿ ಎನ್‌ಐಎ 21 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.