ಮೋದಿ ಸರಕಾರದಿಂದ ಮಲತಾಯಿ ಧೋರಣೆ: ಜಿ.ಪರಮೇಶ್ವರ್

ಶನಿವಾರ, 1 ಅಕ್ಟೋಬರ್ 2016 (12:53 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರವು ಸಹ ರಾಜ್ಯದ ವಿರುದ್ಧ ಕೆಲಸ ಮಾಡುತ್ತಿದೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.
 
ವಿಧಾನಸೌಧ ಎದುರು ಅಹೋರಾತ್ರಿ ನಿರಶನ ಕೈಗೊಂಡಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿಯಾಗಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸಿದರು.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಸಂಕಷ್ಟದ ಸ್ಥಿತಿ ಎದುರಾಗಿದೆ. ಯಾವುದೇ ಕಾರಣಕ್ಕೂ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವುದಿಲ್ಲ ಎಂದು ತಿಳಿಸಿದ್ದೇವೆ. ಆದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಪದೇ ಪದೇ ತಿರ್ಮಾಣ ನೀಡುತ್ತಿರುವುದುರಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
 
ಕಾವೇರಿ ನದಿಯಿಂದ ತಮಿಳುನಾಡಿಗೆ ಅಕ್ಟೋಬರ್ 1 ರಿಂದ 6 ರವರೆಗೂ ಒಟ್ಟು 36 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ನಿನ್ನೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಆದರೆ, ಈ ಕುರಿತು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆಯುವ ಸರ್ವಪಕ್ಷ ಸಭೆಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
 
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀರಾವರಿ ವಿಷಯಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಇದೀಗ, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧಿಸಿ ಅವರು ಅಹೋರಾತ್ರಿ ನಿರಶನ ಕೈಗೊಂಡಿರುವುದು ವಿಶೇಷವೇ ಸರಿ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ