ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಪ್ರಗತಿಯ ಕುರಿತು ಮಾಹಿತಿ ಪಡೆದ ಪ್ರಧಾನಿಯವರು ವಿಶ್ವವಿದ್ಯಾಲಯಗಳು, ಶಿಕ್ಷಕರು, ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೊಸ ನೀತಿಯನ್ನು ಅನುಷ್ಠಾನಗೊಳಿಸುವಂತೆ ಸಲಹೆ ನೀಡಿದರು. ಅಮೃತ ಯೋಜನೆಗಳ ಕುರಿತು ಹರ್ಷ ವ್ಯಕ್ತಪಡಿಸಿ, ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಂಯೋಜನೆಗೊಳಿಸಿ, ಕ್ರಮ ಕೈಗೊಳ್ಳುವಂತೆ ಹಾಗೂ ಇದರ ಮೇಲ್ವಿಚಾರಣೆಗೆ ಹಿರಿಯ ಅಧಿಕಾರಿಯ ನೇಮಕ ಮಾಡುವಂತೆ ತಿಳಿಸಿದರು. ವಸತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಪ್ರಧಾನ್ ಮಂತ್ರಿ ಆವಾಸ್ ಯೋಜನೆಯೊಂದಿಗೆ ಸಂಯೋಜನೆ ಮಾಡುವಂತೆ ತಿಳೀಸಿದರು. ಇದರೊಂದಿಗೆ ಕೌಶಲ್ಯ ಅಭಿವೃದ್ಧಿ, ಸ್ವಸಹಾಯ ಸಂಘಗಳ ಸಬಲೀಕರಣ ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಮುಖ್ಯಮಂತ್ರಿಯವರು ತಿಳಿಸಿದರು.ನಿಷ್ಠೆಯಿಂದ ದಿಟ್ಟತನದಿಂದ ಜನಪರ ಕೆಲಸ ಮಾಡುವಂತೆ ಪ್ರಧಾನಿಯವರು ತಿಳಿಸಿದ್ದಾರೆ. ವಿಧಾನಸಭಾ ಉಪಚುನಾವಣೆಯ ಫಲಿತಾಂಶಗಳ ಕುರಿತು ಮಾಹಿತಿ ನೀಡಿದಾಗ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ, 2023ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪರ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ ಎಂದು ಸಿಎಂ ತಿಳಿಸಿದರು.