ಬೆಂಗಳೂರು : ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಅಂಡ್ ಕಮಾಂಡ್ ನೆಟ್‌ವರ್ಕ್ ಕೇಂದ್ರಕ್ಕೆ ಆಗಮಿಸಿದ್ದಾರೆ.
ಕೇಂದ್ರಕ್ಕೆ ಭೇಟಿ ನೀಡಿ ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ಚಂದ್ರಯಾನ-3 ಮಿಷನ್ ತಂಡದೊಂದಿಗೆ ಸುಮಾರು 1 ಗಂಟೆಗಳ ಕಾಲ ಚರ್ಚಿಸಿದರು. ನಂತರ ಚಂದ್ರಯಾನ-3 ಮಿಷನ್ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡರು.
ಇದೇ ವೇಳೆ ಪ್ರಧಾನಿ ಮೋದಿ ಅವರಿಗೆ, ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈನಲ್ಲಿ ಕಾಲಿಟ್ಟ ದೃಶ್ಯವಿರುವ ಫೋಟೋ ಫ್ರೇಮ್ ಅನ್ನು ಇಸ್ರೋ ವಿಜ್ಞಾನಿಗಳು ಉಡುಗೊರೆಯಾಗಿ ನೀಡಿದರು.
ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮೋದಿ ಅವರು ವಿಶೇಷ ವಿಮಾನದಲ್ಲಿ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.