ಬೆಂಗಳೂರು: ಮುಡಾ ಸೈಟ್ ಹಂಚಿಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಅವರು ದಾಖಲೆ ಸಮೇತ ಲೋಕಾಯುಕ್ತಕ್ಕೆ ಶನಿವಾರ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ ಮತ್ತು ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ 400ಕ್ಕೂ ಹೆಚ್ಚು ಪುಟಗಳ ದಾಖಲೆ ಸಮೇತ ದೂರು ನೀಡಿ, ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಸದ್ಯ ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಭಾರೀ ದೊಡ್ಡ ಸದ್ದು ಮಾಡುತ್ತಿದ್ದು, ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಪ್ರತಿಪಕ್ಷಗಳು ಸದನದ ಒಳಗೆ ಮತ್ತು ಹೊರಗೆ ತೀವ್ರ ಹೋರಾಟ ನಡೆಸುತ್ತಿವೆ. ಇದೀಗ ಬಿಜೆಪಿ ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದೆ.
ಲೋಕಯುಕ್ತಕ್ಕೆ ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎನ್ ಆರ್ ರಮೇಶ್ ಅವರು, 1997-98ರಲ್ಲಿ ಜೆ ಎಚ್ ಪಟೇಲ್ ಅವರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಸ್ವಾಧೀನಪಡಿಸಿಕೊಂಡ ದೇವನೂರು ಮೂರನೇ ಬಡಾವಣೆಯನ್ನು ಮುಡಾ ಕೈ ಬಿಡುವಂತೆ ಅಧಿಸೂಚನೆ ಹೊರಡಿಸಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದರು. ಅಲ್ಲದೆ 2004-05ರಲ್ಲಿ ಧರ್ಮಸಿಂಗ್ ಅವರ ಸರ್ಕಾರದಲ್ಲೂ ಉಪಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ಇದೇ ಭೂಮಿಯನ್ನು ಮೃತ ವ್ಯಕ್ತಿಯ ಹೆಸರಿನಲ್ಲಿ ಭೂ ಪರಿವರ್ತನೆ ಮಾಡಿಸಿದ್ದರು ಎಂದು ಗಂಭೀರ ಆರೋಪ ಮಾಡಿದರು.