ರಾಜ್ಯಪಾಲರಾಗಿ ವಜುಭಾಯಿ ವಾಲಾ ಪ್ರಮಾಣ ಸ್ವೀಕಾರ

ಸೋಮವಾರ, 1 ಸೆಪ್ಟಂಬರ್ 2014 (18:47 IST)
ಕರ್ನಾಟಕದ ನೂತನ ರಾಜ್ಯಪಾಲರಾಗಿ ಗುಜರಾತ್‌ನ ವಜುಭಾಯಿ ರುಡಾಭಾಯಿ ವಾಲಾ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
 
ಇಂದು ಸಂಜೆ 5 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಅವರು ವಜುಭಾಯಿ ವಾಲಾ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹಾಗೂ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಲವು ಸಚಿವರು, ಶಾಸಕರು ಮತ್ತು ಬಿಜೆಪಿ ನಾಯಕರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.
 
ಗುಜರಾತ್ ವಿಧಾನಸಭೆ ಸ್ಪೀಕರ್ ಆಗಿದ್ದ ವಜುಭಾಯಿ ವಾಲಾ ಅವರನ್ನು ಕೇಂದ್ರ ಸರ್ಕಾರ ಕಳೆದ ಮಂಗಳವಾರ ಕರ್ನಾಟಕ ರಾಜ್ಯಪಾಲರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿತ್ತು.
 
ಈ ಹಿಂದೆ ಕರ್ನಾಟಕದ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಅವರು ತಮ್ಮ ಅವಧಿ ಮುಗಿದ ಹಿನ್ನಲೆಯಲ್ಲಿ ಜೂ.28 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ, ತಮಿಳುನಾಡು ರಾಜ್ಯಪಾಲ ಕೆ.ರೋಸಯ್ಯ ಅವರಿಗೆ ರಾಜ್ಯದ ಹೆಚ್ಚುವರಿ ಹೊಣೆಯನ್ನು ನೀಡಲಾಗಿತ್ತು.
 

ವೆಬ್ದುನಿಯಾವನ್ನು ಓದಿ