ರಾಮನಗರ: ಕರ್ನಾಟಕ ಲೋಕಸಭೆ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರವಾದ ಚನ್ನಪಟ್ಟಣ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಇಂದು ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಭರ್ಜರಿ ಶೋ ಬಳಿಕ ತಾಲ್ಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ರೋಡ್ ಶೋನಲ್ಲಿ ನಿಖಿಲ್ ಕುಮಾರಸ್ವಾಮಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಮಾಜಿ ಡಿಸಿಎಂ ಅಶ್ವಥ್ ನಾರಾಯಣಗೌಡ, ಸಂಸದ ಡಾ.ಮಂಜುನಾಥ್ ಸೇರಿ ಜೆಡಿಎಸ್‌ನ ಶಾಸಕರು, ಮಾಜಿ ಸಚಿವರು ಸಾಥ್ ನೀಡಿದರು.
ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್‌ನ ಸುಮಾರು 20 ಸಾವಿರ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು. ರೋಡ್ ಶೋ ಬಳಿಕ ತಾಲೂಕು ಕಚೇರಿಗೆ ಆಗಮಿಸಿ ನಿಖಿಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ಈ ಬಾರಿ ಚಕ್ರವ್ಯೂಹ ಬೇಧಿಸುವ ಶಕ್ತಿ ಚನ್ನಪಟ್ಟಣದ ಜನ ನೀಡುತ್ತಾರೆ. ಹಣ ಬಲ, ತೋಳ್ಬಲ ಯಾವುದೂ ನಡೆಯಲ್ಲ. ಚನ್ನಪಟ್ಟಣ ಜನ ನಮ್ಮ ಅಭಿವೃದ್ಧಿ ಕೆಲಸಗಳಿಗೆ ನಮಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು