ಬೆಂಗಳೂರು : ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶಕ್ತಿ ಭವನದಲ್ಲಿ ಬುಧವಾರ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆಟ್ರಿಕ್ ಟನ್ ಅಗತ್ಯವಿದೆ ಎಂದು ಕೋರಿ ಜೂ.9 ರಂದು ಪತ್ರ ಬರೆಯಲಾಗಿತ್ತು.
ಇದಕ್ಕೆ ಜೂ.12 ರಂದು ಭಾರತೀಯ ಆಹಾರ ನಿಗಮವು ಒಪ್ಪಿಗೆ ಸೂಚಿಸಿ ಕ್ವಿಂಟಾಲ್ಗೆ 3,400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.