ಕಾನೂನಿಗಿಂತ ಯಾರು ದೊಡ್ಡವರಲ್ಲ, ತಪ್ಪು ಮಾಡಿದ್ದರೆ ಶಿಕ್ಷಾರ್ಹರೇ: ವಿ.ಸೋಮಣ್ಣ

ಮಂಗಳವಾರ, 19 ಜುಲೈ 2016 (18:33 IST)
ಕಾನೂನಿಗಿಂತ ಯಾರು ದೊಡ್ಡವರಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಪ್ಪು ಮಾಡಿದ್ದರೆ ಅವರು ಶಿಕ್ಷಾರ್ಹರೇ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
 
ಗುರುಪೂರ್ಣಿಮೆ ನಿಮಿತ್ತ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ವಿ.ಸೋಮಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ 8 ಪ್ರಕರಣಗಳಿವೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿರುವ ಕುರಿತು ನನಗೆ ಮಾಹಿತಿ ಇಲ್ಲ. ಆದರೆ, ಅವರು ಸಾಕ್ಷಾಧಾರವಿಲ್ಲದೆ ಆರೋಪ ಮಾಡುವವರಲ್ಲ ಎಂದು ತಿಳಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದರೆ, ಕಾನೂನಿನ ಪ್ರಕಾರ ತಪ್ಪಿತಸ್ಥರೆ. ಅವರು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದರು.
 
ಮರಣ ಪೂರ್ವ ಹೇಳಿಕೆಯನ್ನು ಪರಿಗಣಿಸಬೇಕು ಎಂದು ಸುಪ್ರಿಂ ಕೋರ್ಟ್‌ ಆದೇಶವಿದ್ದರು, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯ ಸರಕಾರ ನಡೆದುಕೊಂಡ ರೀತಿ ಕೀಳು ಮಟ್ಟದಾಗಿತ್ತು. ರಾಜ್ಯದಲ್ಲಿ ಇಂತಹ ಕೆಟ್ಟ ಪರಿಸ್ಥಿತಿಯನ್ನು ನಾನು ಎಂದಿಗೂ ನೋಡಿಲ್ಲ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
 
ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಮತ್ತು ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಮಾಜಿ ಸಚಿವ ವಿ.ಸೋಮಣ್ಣ ಆಗ್ರಹಿಸಿದ್ದಾರೆ.
 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ