Operation Sindoora: ಭಾರತದ ವಿರುದ್ದ ಛೂಬಿಡುತ್ತಿದ್ದ ಪಾಕ್‌ಗೆ ಎಚ್ಚರಿಕೆ ಗಂಟೆ ಎಂದ ಸಿದ್ದರಾಮಯ್ಯ

Sampriya

ಬುಧವಾರ, 7 ಮೇ 2025 (14:12 IST)
ಬೆಂಗಳೂರು: ಪೆಹಲ್ಗಾಮ್‌ ಭಯೋತ್ಪಾದನಾ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತ ಸೇನೆ ನಡೆಸಿರುವ ಆಪರೇಷನ್‌ ಸಿಂಧೂರ ದಾಳಿಯನ್ನು ನಾವೆಲ್ಲ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ನಮ್ಮ ಸರ್ಕಾರವು ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ ಎಂದು ಅವರು ಹೇಳಿದರು.

ದೇಶದ ಸೇನಾಪಡೆಯು ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದೆ. ದೇಶದ ರಾಜ್ಯದ ಪರವಾಗಿ ಸೇನೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದರು.

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ 26 ಜನರ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ. ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ಭಾರತೀಯ ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಛೂಬಿಡುತ್ತಿದ್ದ ಪಾಕಿಸ್ತಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ ಎಂದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ