ನವೆಂಬರ್ 20ರವರೆಗೆ ಮತದಾರರ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಶನಿವಾರ, 27 ಅಕ್ಟೋಬರ್ 2018 (17:34 IST)
ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ನವೆಂಬರ್ 20ರವರೆಗೆ ಕರಡು ಪಟ್ಟಿ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುವುದು. ಕರಡು ಮತದಾರರ ಪಟ್ಟಿಗೆ ಮತದಾರರು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮತದಾರರ ಪಟ್ಟಿ ಪರಿಷ್ಕರಣಾ ವೀಕ್ಷಕ ಹಾಗೂ ಪ್ರಾದೇಶಿಕ ಆಯುಕ್ತ ತಿಳಿಸಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆದ 2019ನೇ ಸಾಲಿನ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳ ತಿದ್ದುಪಡಿ, ವರ್ಗಾವಣೆ, ಹೆಸರು ತೆಗೆದು ಹಾಕುವ ಬಗ್ಗೆ ನವೆಂಬರ್ 20ರೊಳಗಾಗಿ ಸಂಬಂಧಿಸಿದ ಭೂತ ಮಟ್ಟದ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಸಾಧ್ಯವಾಗುವುದಿಲ್ಲ ಎಂದರು.
ಮತದಾರರ ಕರಡು ಪಟ್ಟಿ ಪರಿಷ್ಕರಣೆ ಕಾರ್ಯವು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಈ ಹಂತದಲ್ಲಿ ಮತದಾರರ ಪಟ್ಟಿಯನ್ನು ಸರಿಯಾಗಿ ಪರಿಷ್ಕರಣೆ ಮಾಡಿದರೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ ನಂತರ ಯಾವುದೇ ತೊಂದರೆಗಳು ಉದ್ಭವಿಸುವುದಿಲ್ಲ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಗೆ ಅಂತಿಮ ಹಂತದಲ್ಲಿ ಗೊಂದಲಗಳು ಉಂಟಾಗುವುದಿಲ್ಲ. ಮತದಾರರು ಆನ್‍ಲೈನ್‍ನಲ್ಲಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಿದ್ದಲ್ಲಿ ಅವರಿಗೆ ಸ್ವೀಕೃತಿ ಮತ್ತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಸಿಗುವಂತಾಗಬೇಕು ಎಂದರು.