ವಿಧಾನೌಧದಲ್ಲಿ ಪಾಕಿಸ್ತಾನ ಜಿಂದಾಬಾದ್: ಸಂಸದ ನಾಸಿರ್ ಹುಸೇನ್ ಬೆಂಬಲಿಗನಿಗಾಗಿ ಶೋಧ

Krishnaveni K

ಬುಧವಾರ, 28 ಫೆಬ್ರವರಿ 2024 (10:11 IST)
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಸಂಸದ ನಾಸಿರ್ ಹುಸೇನ್ ಬೆಂಬಲಿಗನಿಗಾಗಿ ಹುಡುಕಾಟ ನಡೆಸಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾದ ಬಳಿಕ ಸೈಯದ್ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ಬೆಂಬಲಿಗನೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ. ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೇ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಆ ಕ್ಷಣದಲ್ಲೇ ಘಟನೆ ಬಗ್ಗೆ ಸಂಸದರನ್ನು ಪ್ರಶ್ನಿಸಿದಾಗ ಅವರು ಉಡಾಫೆಯ ಉತ್ತರ ನೀಡಿದ್ದರು.

ಇದೀಗ ಪ್ರತಿಪಕ್ಷ ಬಿಜೆಪಿ ಘಟನೆ ಬಗ್ಗೆ ಇಂದು ಪ್ರತಿಭಟನೆ ಹಮ್ಮಿಕೊಂಡಿದೆ. ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ. ಪ್ರಕರಣದ ಬಗ್ಗೆ ನಾನಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಸದ್ಯಕ್ಕೆ ಘೋಷಣೆ ಕೂಗಿದ್ದ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶೇಖರ್  ಹೇಳಿದ್ದಾರೆ.

ವಿಡಿಯೋದಲ್ಲಿನ ವಾಸ್ತವಾಂಶ ತಿಳಿಯಲು ವಿಡಿಯೋ ಕ್ಲಿಪ್ ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ನಾಸಿರ್ ಹುಸೇನ್ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ನನಗೆ ಕೇಳಿಸಿಲ್ಲ. ಒಂದು ವೇಳೆ ಕೂಗಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.

ಆದರೆ ಬಿಜೆಪಿ ಈ ಘಟನೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ತೀರ್ಮಾನಿಸಿದೆ. ಇಂದು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ನಿನ್ನೆಯೇ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ಕೂಡಾ ದಾಖಲಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ