ಮಂಡ್ಯ: ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಪ್ರತಿಭಟನೆ ಮಾಡುವುದಕ್ಕಿಂತ ರಾಜ್ಯ ಸರ್ಕಾರದ ದುರಾಡಳಿತ ವಿರುದ್ಧ ಜನರೇ ದಂಗೆ ಏಳಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದ ನಂತರ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲು ಬೆಲೆ ಏರಿಕೆ ಮಾಡಿರುವುದಾಗಿ ಕಾಂಗ್ರೆಸ್ ಸಚಿವರೇ ಒಪ್ಪಿಕೊಂಡಿದ್ದಾರೆ. ಜನರಿಂದಲೇ ದುಡ್ಡು ವಸೂಲಿ ಮಾಡಿ, ಜನರಿಗೆ ಹಣ ನೀಡಲು ಮುಂದಾಗಿದ್ದಾರೆ. ಈ ಬಗ್ಗೆ ಜನ ಪ್ರತಿಭಟಿಸುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ, ಇನ್ನೂ ಅದಕ್ಕೆ ಕಾಲಾವಕಾಶವಿದೆ ಬನ್ನಿ ಎಂದು ಎಚ್‌ಡಿಕೆ ಹೇಳುವ ಮೂಲಕ ಅಭ್ಯರ್ಥಿ ಯಾರು ಎಂಬ ಬಗ್ಗೆ ಗುಟ್ಟು ಬಿಡಕೊಡಲಿಲ್ಲ.